ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR)-2026 ಕಾರ್ಯಕ್ಕೆ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸಹಾಯಕರಾಗಿ ನಿಯೋಜಿಸಲಾಗಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಗೌರವಧನ ನಿಗದಿಪಡಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ಆಗ್ರಹಿಸಿದೆ.
ಈ ಸಂಬಂಧ ಸಂಘದ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ನೇತೃತ್ವದ ನಿಯೋಗವು ಸೋಮವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮನವಿಯನ್ನು ಪರಿಶೀಲಿಸುವುದಾಗಿ ಮುಖ್ಯ ಚುನಾವಣಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಸಂಘ ತಿಳಿಸಿದೆ.
ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೆ. ಸೋಮಶೇಖರ್ ಯಾದಗಿರಿ ಹಾಗೂ ಡಿ. ನಾಗಲಕ್ಷ್ಮಿ, ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ತಾಲೂಕುಗಳಲ್ಲಿ ಜಿಲ್ಲಾಧಿಕಾರಿಗಳು, ತಹಸೀಲ್ದಾರರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರನ್ನು ಎಸ್‌ಐಆರ್ ಕರ್ತವ್ಯಕ್ಕೆ ಹೆಚ್ಚುವರಿ ಸಿಬ್ಬಂದಿಯಾಗಿ ನಿಯೋಜಿಸಿದ್ದಾರೆ. ಆದರೆ, ಈ ಹೆಚ್ಚುವರಿ ಜವಾಬ್ದಾರಿಗೆ ಯಾವುದೇ ಗೌರವಧನ ಅಥವಾ ಭತ್ಯೆ ಕುರಿತು ಅಧಿಕೃತ ಆದೇಶಗಳಲ್ಲಿ ಉಲ್ಲೇಖವಿಲ್ಲ ಎಂದು ಗಮನಸೆಳೆದಿದ್ದಾರೆ.

ಸಂಘವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಎಸ್‌ಐಆರ್ ಕಾರ್ಯದಲ್ಲಿ ಭಾಗವಹಿಸುವ ಪ್ರತಿ ಆಶಾ ಕಾರ್ಯಕರ್ತೆಗೆ ₹5,000 ಗೌರವಧನ ನೀಡಬೇಕು. ಜೊತೆಗೆ, ಜೂನ್ 30ರಿಂದ ಜುಲೈ 29ರವರೆಗೆ ನಡೆಯುವ ಮನೆಮನೆ ಸಮೀಕ್ಷೆಯ ಚುನಾವಣಾ ಕರ್ತವ್ಯದಿಂದ ಸಾರ್ವಜನಿಕ ಆರೋಗ್ಯ ಸೇವೆಗೆ ತೊಂದರೆಯಾಗದಂತೆ, ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸಮಯ ಮತ್ತು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳ ಆರೈಕೆ, ಲಸಿಕಾ ಕಾರ್ಯಕ್ರಮ ಸೇರಿದಂತೆ ಹಲವು ಆರೋಗ್ಯ ಸೇವೆಗಳಲ್ಲಿ ಆಶಾ ಕಾರ್ಯಕರ್ತೆಯರು ನಿರಂತರವಾಗಿ ತೊಡಗಿಸಿಕೊಂಡಿರುವುದರಿಂದ, ಹೆಚ್ಚುವರಿ ಚುನಾವಣಾ ಕರ್ತವ್ಯಕ್ಕೆ ಸೂಕ್ತ ಗೌರವಧನ ಹಾಗೂ ಸಮರ್ಪಕ ವ್ಯವಸ್ಥೆ ಕಲ್ಪಿಸುವುದು ಅಗತ್ಯ ಎಂದು ಅವರು ಸರ್ಕಾರದ ಗಮನಸೆಳೆದಿದ್ದಾರೆ.
