ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ತೀರ್ಮಾನ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧದ ಹೋರಾಟ ಹಾಗೂ ಮುಂಬರುವ ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಮತ್ತಷ್ಟು ಬಲಪಡಿಸಲು ಉಭಯ ಪಕ್ಷಗಳ ನಾಯಕರು ಸಮನ್ವಯ ಸಮಿತಿ ರಚಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಜೆಡಿಎಸ್ ನಾಯಕರ ನಡುವಿನ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ರಾಜ್ಯ ಮಟ್ಟದಲ್ಲಿ ಮೈತ್ರಿ ಸಮನ್ವಯವನ್ನು ಪರಿಣಾಮಕಾರಿಯಾಗಿ ನಡೆಸಲು ಸಮಿತಿ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿಯ ಪ್ರಕಾರ, ಒಟ್ಟು ಆರು ಸದಸ್ಯರ ಸಮನ್ವಯ ಸಮಿತಿ ರಚಿಸಲಾಗುತ್ತದೆ. ಬಿಜೆಪಿಯಿಂದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸದಸ್ಯರಾಗಲಿದ್ದಾರೆ. ಜೆಡಿಎಸ್‌ನಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಇನ್ನಿಬ್ಬರು ಸದಸ್ಯರು ಸಮಿತಿಯಲ್ಲಿ ಇರಲಿದ್ದಾರೆ ಎನ್ನಲಾಗಿದೆ.

ಮುಂಬರುವ ಧಾರವಾಡ ಮತ್ತು ಹಿರಿಯೂರು ವಿಧಾನಸಭಾ ಉಪಚುನಾವಣೆಗೂ ಮುನ್ನ ಸಮಿತಿಯನ್ನು ಅಧಿಕೃತವಾಗಿ ರಚಿಸುವ ಉದ್ದೇಶವನ್ನು ಉಭಯ ಪಕ್ಷಗಳ ನಾಯಕರು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ವಿಧಾನಪರಿಷತ್ ಚುನಾವಣೆಯಲ್ಲಿ ಉಂಟಾದ ಸಮನ್ವಯದ ಕೊರತೆ ಮತ್ತು ಮುಜುಗರದ ಸನ್ನಿವೇಶಗಳು ಮರುಕಳಿಸದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಮನ್ವಯ ಸಮಿತಿಯ ಮೂಲಕ ಚುನಾವಣಾ ತಂತ್ರ, ಸಂಘಟನಾ ಚಟುವಟಿಕೆಗಳು ಹಾಗೂ ಮೈತ್ರಿ ಪಕ್ಷಗಳ ನಡುವೆ ನಿರಂತರ ಸಂಪರ್ಕ ಸಾಧಿಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.