ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಜಂತರ್ ಮಂತರ್‌ಗೆ ತೆರಳುತ್ತಿದ್ದ ‘ಇಂಡಿಯಾ’ ಮೈತ್ರಿಕೂಟದ ವಿರೋಧ ಪಕ್ಷದ ಸಂಸದರನ್ನು ದೆಹಲಿ ಪೊಲೀಸರು ತಡೆದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಡ್ರಾಮಾ ನಡೆಯಿತು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಸಂಸದರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನಾ ಸ್ಥಳದಿಂದ ರಾಹುಲ್ ಗಾಂಧಿ ಅವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಯಿತು.
ಇದೇ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಇತರ ಮಹಿಳಾ ಸಂಸದರು ಜಂತರ್ ಮಂತರ್‌ಗೆ ತೆರಳುವ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಪೊಲೀಸರು ತಡೆದ ಹಿನ್ನೆಲೆಯಲ್ಲಿ ಮಹಿಳಾ ಸಂಸದರು ರಸ್ತೆಯ ಮೇಲೆ ಸಂವಿಧಾನದ ಪ್ರತಿಯನ್ನು ಹಿಡಿದು ಧರಣಿ ನಡೆಸಿದರು.

ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಿಯಾಂಕಾ ಗಾಂಧಿ ಸೇರಿದಂತೆ ಮಹಿಳಾ ಸಂಸದರನ್ನು ಸ್ಥಳದಿಂದ ತೆರವುಗೊಳಿಸಿದರು. ಈ ವೇಳೆ ಪ್ರಿಯಾಂಕಾ ಗಾಂಧಿ ಅವರನ್ನು ಮಹಿಳಾ ಪೊಲೀಸ್ ಸಿಬ್ಬಂದಿ ಬಲವಂತವಾಗಿ ಎಬ್ಬಿಸಿ ಪೊಲೀಸ್ ಬಸ್‌ಗೆ ಕರೆದೊಯ್ದರು.
ಪೊಲೀಸರು ತಮ್ಮನ್ನು ವಶಕ್ಕೆ ಪಡೆಯುವ ವೇಳೆ ನೆಲಕ್ಕೆ ದೂಡಿ, ಮೈಯೆಲ್ಲಾ ಪರಚಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದರು.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಮಂಗಳವಾರವೂ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದರು. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿಚಾರಗಳಲ್ಲಿ ಚುನಾವಣಾ ಆಯೋಗದ ವಿರುದ್ಧ ‘ಇಂಡಿಯಾ’ ಮೈತ್ರಿಕೂಟದ ಪ್ರತಿಭಟನೆ ಮುಂದುವರಿದಿದೆ.
