ನವದೆಹಲಿ: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯಕೀಯ ಅಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಎಂಎಸ್‌ಎಂಇ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.
ಆಗಸ್ಟ್ 2ರಂದು ಬರೆದಿರುವ ಪತ್ರದಲ್ಲಿ, ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ಹಸ್ತಕ್ಷೇಪ ಹಾಗೂ ಕ್ರಿಮಿನಲ್ ಪಿತೂರಿ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ಉಲ್ಲೇಖಿಸಿರುವ ಅವರು, ಇಂತಹ ಬೆಳವಣಿಗೆಗಳು ಸರ್ಕಾರಿ ನೇಮಕಾತಿ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಹಣದ ವ್ಯವಹಾರ ಹಾಗೂ ಆಯ್ಕೆ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಗಳ ಕುರಿತು ಸಮಗ್ರ ತನಿಖೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಲಕ್ಷಾಂತರ ಅರ್ಹ ಅಭ್ಯರ್ಥಿಗಳು ಪಾರದರ್ಶಕ ಹಾಗೂ ಅರ್ಹತೆ ಆಧಾರಿತ ನೇಮಕಾತಿಗೆ ಅರ್ಹರಾಗಿದ್ದು, ಸಂವಿಧಾನದ 14 ಮತ್ತು 16ನೇ ವಿಧಿಗಳು ನೀಡಿರುವ ಸಮಾನ ಅವಕಾಶದ ಹಕ್ಕನ್ನು ರಕ್ಷಿಸುವುದು ಅತ್ಯಗತ್ಯ ಎಂದು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು, ಹಣದ ಅಕ್ರಮ ಹರಿವನ್ನು ಪತ್ತೆಹಚ್ಚಲು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶೋಭಾ ಕರಂದ್ಲಾಜೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಅರ್ಹತೆಯನ್ನು ಎಂದಿಗೂ ತ್ಯಾಗ ಮಾಡಬಾರದು. ನಮ್ಮ ಯುವಕರು ಮತ್ತು ಅವರ ಕುಟುಂಬಗಳ ಕಠಿಣ ಪರಿಶ್ರಮ, ಬದ್ಧತೆ ಹಾಗೂ ತ್ಯಾಗಗಳು ಭ್ರಷ್ಟಾಚಾರಕ್ಕೆ ಬಲಿಯಾಗಬಾರದು” ಎಂದು ಹೇಳಿದ್ದಾರೆ.
ನೇಮಕಾತಿ ಅಕ್ರಮದಲ್ಲಿ ತಪ್ಪಿತಸ್ಥರನ್ನು ಕಾನೂನಿನ ಮುಂದೆ ತಂದು ಹೊಣೆಗಾರರನ್ನಾಗಿ ಮಾಡಬೇಕು. ಜೊತೆಗೆ ಸರ್ಕಾರಿ ನೇಮಕಾತಿ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಪುನಃಸ್ಥಾಪಿಸಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
Merit must never be sacrificed. The hard work, commitment and sacrifices of our youth and their families must never become victims of corruption.
I have written to Hon’ble Union Home Minister Shri @AmitShah Ji seeking a CBI investigation into the serious allegations of… pic.twitter.com/d1u741uPyT
— Shobha Karandlaje (@ShobhaBJP) August 2, 2026
