ವಿಕಸಿತ ಭಾರತ ನಿರ್ಮಾಣಕ್ಕೆ ‘ವೋಕಲ್ ಫಾರ್ ಲೋಕಲ್’ ಸಂಕಲ್ಪ ಅಗತ್ಯ: ಡಾ.ಸಿ.ಟಿ.ರವಿ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು 25 ವರ್ಷಗಳ ಸಾರ್ವಜನಿಕ ಜೀವನದಲ್ಲಿ ನಿರಂತರವಾಗಿ ರಾಷ್ಟ್ರಕ್ಕಾಗಿ ಕಾರ್ಯನಿರ್ವಹಿಸಿದ್ದು, ಅವರ ಅಭಿವೃದ್ಧಿಯ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕರ್ಮಯೋಗಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಹೇಳಿದ್ದಾರೆ.

ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯರಸ್ತೆಯ ಶ್ರೀ ಓಂಕಾರೇಶ್ವರ ದೇವಾಲಯದ ಆವರಣದಲ್ಲಿ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ‘ಸೇವಾ ಜ್ಯೋತಿ ಯಾತ್ರೆ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ’ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ವೀಕ್ಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರು 13 ವರ್ಷ ಮುಖ್ಯಮಂತ್ರಿಯಾಗಿ ಹಾಗೂ 12 ವರ್ಷ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವುದು ಮಾತ್ರ ಅವರ ವಿಶೇಷತೆಯಲ್ಲ. 25 ವರ್ಷಗಳ ಕಾಲ ಕಳಂಕರಹಿತ ಆಡಳಿತ ಹಾಗೂ ನಿರಂತರ ಪರಿಶ್ರಮದಿಂದ ಕಾರ್ಯನಿರ್ವಹಿಸಿರುವುದು ಅವರ ವಿಶೇಷತೆ ಎಂದು ರವಿ ಹೇಳಿದರು.

ಮೋದಿ ನೇತೃತ್ವದಲ್ಲಿ ದೇಶದಲ್ಲಿ ಹಲವು ಮಹತ್ವದ ಬದಲಾವಣೆಗಳಾಗಿವೆ. ಜನಧನ್, ಉಜ್ವಲ, ಆಯುಷ್ಮಾನ್ ಭಾರತ್, ಪ್ರಧಾನಮಂತ್ರಿ ಭಾರತೀಯ ಜನಔಷಧಿ ಕೇಂದ್ರ, ಪ್ರಧಾನಮಂತ್ರಿ ವಿಶ್ವಕರ್ಮ, ಸ್ಟಾರ್ಟಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ ಹಾಗೂ ಮೇಕ್ ಇನ್ ಇಂಡಿಯಾ ಸೇರಿದಂತೆ ಹಲವು ಯೋಜನೆಗಳು ಜಾರಿಯಾಗಿವೆ ಎಂದು ಅವರು ಹೇಳಿದರು.

ದೇಶದ ಭದ್ರತಾ ನೀತಿಯಲ್ಲೂ ಬದಲಾವಣೆ ಕಂಡುಬಂದಿದೆ ಎಂದು ರವಿ ಹೇಳಿದರು. ಸರ್ಜಿಕಲ್ ಸ್ಟ್ರೈಕ್‌ನಂತಹ ಕ್ರಮಗಳ ಮೂಲಕ ದೇಶದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ದೇಶವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ದುರಾಡಳಿತದಿಂದ ಆರ್ಥಿಕತೆ ದುರ್ಬಲವಾಗಿದ್ದ ಸಂದರ್ಭದಲ್ಲಿ ಮೋದಿ ನೇತೃತ್ವದ ಸರ್ಕಾರ ಆರ್ಥಿಕತೆಯನ್ನು ಬಲಪಡಿಸುವ ಕೆಲಸ ಮಾಡಿದೆ ಎಂದು ರವಿ ಅಭಿಪ್ರಾಯಪಟ್ಟರು.

‘ವೋಕಲ್ ಫಾರ್ ಲೋಕಲ್’ಗೆ ಆದ್ಯತೆ

2047ರಲ್ಲಿ ಸ್ವಾತಂತ್ರ್ಯದ ಶತಮಾನೋತ್ಸವದ ವೇಳೆಗೆ ಭಾರತವನ್ನು ವಿಕಸಿತ, ಆತ್ಮನಿರ್ಭರ, ಬಡತನಮುಕ್ತ ಹಾಗೂ ವಿಶ್ವಗುರು ರಾಷ್ಟ್ರವನ್ನಾಗಿ ರೂಪಿಸುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿದ್ದಾರೆ. ಈ ಸಂಕಲ್ಪ ಸಾಕಾರಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ರವಿ ಹೇಳಿದರು.

ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ‘ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದೇಶಿ ಉತ್ಪನ್ನಗಳ ಬದಲಿಗೆ ಸ್ಥಳೀಯವಾಗಿ ತಯಾರಾಗುವ ವಸ್ತುಗಳನ್ನು ಖರೀದಿಸುವ ಮೂಲಕ ಸ್ಥಳೀಯ ಉತ್ಪಾದಕರು ಹಾಗೂ ಆರ್ಥಿಕತೆಯನ್ನು ಬೆಂಬಲಿಸಬಹುದು ಎಂದು ಅವರು ಕರೆ ನೀಡಿದರು.

ಚಿಕ್ಕಮಗಳೂರಿಗೆ ಹಲವು ಯೋಜನೆ

ಚಿಕ್ಕಮಗಳೂರು ಜಿಲ್ಲೆಗೆ ಕೇಂದ್ರ ಸರ್ಕಾರದ ಅವಧಿಯಲ್ಲಿ ದೊರೆತ ವಿವಿಧ ಅಭಿವೃದ್ಧಿ ಯೋಜನೆಗಳನ್ನು ರವಿ ಸ್ಮರಿಸಿದರು. ಚಿಕ್ಕಮಗಳೂರು–ಕಡೂರು ರಾಷ್ಟ್ರೀಯ ಹೆದ್ದಾರಿ, ಚಿಕ್ಕಮಗಳೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು, ಚಿಕ್ಕಮಗಳೂರು–ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ, ಬೆಂಗಳೂರು–ಕಡೂರು–ಹೊನ್ನಾವರ–ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಹಾಗೂ ಚಿಕ್ಕಮಗಳೂರು–ಬೇಲೂರು–ಹಾಸನ ರೈಲು ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಅವರು ಉಲ್ಲೇಖಿಸಿದರು.

ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ದೊರೆಯಲಿ ಎಂದು ಹಾರೈಸಿದ ರವಿ, ಭವ್ಯ ಭಾರತದ ನಿರ್ಮಾಣದ ಅವರ ಸಂಕಲ್ಪ ಸಾಕಾರಗೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಕನಕರಾಜ್ ಅರಸ್, ಬಿ.ಜಿ. ಸೋಮಶೇಖರ್, ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಎಚ್.ಸಿ. ಕಲ್ಮುರುಡಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ನಗರ ಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಎನ್. ವಿಜಯ್ ಕುಮಾರ್, ಜಿಲ್ಲಾ ಬಿಜೆಪಿ ವಕ್ತಾರ ಎಚ್.ಎಸ್. ಪುಟ್ಟಸ್ವಾಮಿ, ಹಿರಿಯ ಮುಖಂಡ ಕೋಟೆ ರಂಗನಾಥ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.